ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ರಾಜ್ಯ ಬಿಜೆಪಿ ನಾಯಕರು ಭ್ರಷ್ಟಾಚಾರದ ಹಣ ಬಳಸಿ ಶಾಸಕರನ್ನು ಖರೀದಿಸಿದ್ದಾರೆ, ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸಬೇಕೆಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ʼಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರವನ್ನು ಕೆಡವಲು ಸಂಚು ಮಾಡಿದ್ದರು. ಜೊತೆಗೆ ಭ್ರಷ್ಟಾಚಾರದ ಹಣವನ್ನು ಬಳಸಿ ಕಾಂಗ್ರೆಸ್ ಜೆಡಿಎಸ್ ಶಾಸಕರನ್ನು ಕೊಂಡುಕೊಂಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಜೀವಂತವಾಗಿದ್ದರೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಆಪರೇಷನ್ ಕಮಲಕ್ಕಾಗಿ ಮೈತ್ರಿ ಸರ್ಕಾರವನ್ನು ಉರುಳಿಸುವ ತಂತ್ರವನ್ನು ರೂಪಿಸಿರುವುದಲ್ಲದೆ, ಸಚಿವ ಸಿ.ಪಿ ಯೋಗೇಶ್ವರ್ ಅವರ ಮನೆ ಅಡವಿಟ್ಟು 9 ಕೋಟಿ ಸಾಲ ಪಡೆಯಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಕುರಿತು ತಕ್ಷಣವೇ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಕೇಂದ್ರದಿಂದ ಹಿಡಿದು ರಾಜ್ಯದ ವರೆಗೂ ಬಿಜೆಪಿ ಪಕ್ಷದಲ್ಲಿ ಬ್ರಷ್ಟಾಚಾರ ತಾಂಡವಾಡುತ್ತಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಲಿ, ನಾನು ಲಂಚ ಪಡೆಯುವುದಿಲ್ಲ ಮತ್ತು ಲಂಚ ಪಡೆಯುವುದಕ್ಕೂ ಬಿಡುವುದಿಲ್ಲ ಎಂದು ಮೋದಿ ಹೇಳಿದ್ದರು. ಇದೀಗ ಅವರ ಪಕ್ಷದ ನಾಯಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದಾಗ ಸುಮ್ಮನಿರುವುದೇಕೆ ಎಂದು ಉಗ್ರಪ್ಪ ಪ್ರಶ್ನಿಸಿದ್ದಾರೆ.
ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರ್ಎಸ್ಎಸ್ ಸಂಚಾಲಕ ಮೋಹನ್ ಭಾಗವತ್ರವರಿಗೆ ಈ ವಿಚಾರ ತಿಳಿದಿಲ್ಲವೆ, ತಮ್ಮ ಪಕ್ಷದ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೂ ಸಮ್ಮನಿರುವುದು ಏಕೆಂದು ಉಗ್ರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತ ಆದಾಯ ತೆರಿಗೆ ಇಲಾಖೆ ಮತ್ತು ಜಾರಿನಿರ್ದೇಶನಾಲಯವು ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದ್ದರೆ, ಸಚಿವ ಜಾರಕಿಹೊಳಿ ಹೇಳಿಕೆ ಆಧರಿಸಿ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿ.ಪಿ ಯೋಗೇಶ್ವರ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ.
ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಆಗ್ರಹಿಸಿದ್ದಾರೆ.