ಉತ್ತರ ಕರ್ನಾಟಕಕ್ಕೆ ಸಿಎಂ ಭೇಟಿ: ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ
ರಾಜ್ಯ

ಉತ್ತರ ಕರ್ನಾಟಕಕ್ಕೆ ಸಿಎಂ ಭೇಟಿ: ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಪ್ರವಾಹ ಬಂದು ಜನಜೀವನವೇ ತತ್ತರಿಸಿ ಹೋಗಿದ್ದ ಕಾರಣ ಮುಖ್ಯಮಂತ್ರಿ ಬಿ.ಎಸ್. ಯೆಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ

ಪ್ರತಿಧ್ವನಿ ವರದಿ

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಪ್ರವಾಹ ಬಂದು ಜನಜೀವನವೇ ತತ್ತರಿಸಿ ಹೋಗಿದ್ದ ಕಾರಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ವೈಮಾನಿಕ ಸಮೀಕ್ಷೆಯ ನಂತರ ಎಲ್ಲ ವರದಿಗಳನ್ನು ಅಧಿಕಾರಿಗಳಿಂದ ತಿಳಿದುಕೊಂಡು ಇದರ ಬಗ್ಗೆ ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು ಮತ್ತು ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಎಲ್ಲ ಕಡೆಗೆ ಕೋವಿಡ್ ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳಿಗೆ ತಮ್ಮ ತಮ್ಮ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ಶೀಘ್ರವೇ ಸರ್ಕಾರಕ್ಕೆ ಕಳಿಸುವಂತೆ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳ ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಬಾಗಿನ:

ಮಂಗಳವಾರ ಬೆಳಗಾವಿಯಿಂದ ಬಾಗಲಕೋಟೆಗೆ ಆಗಮಿಸಿದ ಯಡಿಯೂರಪ್ಪ ಆಲಮಟ್ಟಿಯ ಲಾಲ್‌ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಬಾಗಿನ ಅರ್ಪಿಸಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅತಿವೃಷ್ಟಿ, ಪ್ರವಾಹದಿಂದಾದ‌ ಹಾನಿ ಕುರಿತು ಸಿಎಂ ಯಡಿಯೂರಪ್ಪ ಚರ್ಚೆ

ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಆಲಮಟ್ಟಿಯ ಕೆ.ಬಿ.ಜಿ.ಎನ್.ಎಲ್ ಸಭಾಂಗಣದಲ್ಲಿ ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕಂದಾಯ ಸಚಿವ ಆರ್.ಅಶೋಕ್, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ, ಸೇರಿದಂತೆ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಮುಂದಿನ ವಾರ ದೆಹಲಿಗೆ ಸಿಎಂ

ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ಹಾಗೂ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ತಿಳಿದುಕೊಂಡ ನಂತರ ಸಿಎಂ ಮುಂದಿನ ವಾರ ದೆಹಲಿಗೆ ಭೇಟಿ ರಾಜ್ಯದ ಪ್ರವಾಹದ ಬಗ್ಗೆ ತಿಳಿಸಿ ಹೆಚ್ಚಿನ ಪರಿಹಾರ ನೀಡಲು ಮನವಿ ಮಾಡುವುದಾಗಿ ತಿಳಿಸಿದ್ದಾರೆ

Click here to follow us on Facebook , Twitter, YouTube, Telegram

Pratidhvani
www.pratidhvani.com