ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್‌

ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿಯಲ್ಲಿ ವಿವಿಧ ಶಾಸಕರು, ಸಚಿವರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 570 ಕ್ರಿಮಿನಲ್‌ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು
ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್‌

ವಿವಿಧ ಶಾಸಕರ, ಸಂಸದರ ಹಾಗೂ ಅವರ ಸಹವರ್ತಿಗಳ ಮೇಲಿದ್ದ 570 ಕ್ರಿಮಿನಲ್‌ ಪ್ರಕರಣಗಳನ್ನು ಕೈಬಿಟ್ಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸುವಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿದೆ.

2014 ರಿಂದ 2020 ಮೇ ವರೆಗೆ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಕ್ರಿಮಿನಲ್‌ ಪ್ರಕರಣಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಅಡ್ವಕೇಟ್‌ ಸುಧಾ ಕತ್ವಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರಿನಿವಾಸ್‌ ಒಕಾ ಹಾಗೂ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಪೀಠವು, ಈ ನೋಟಿಸ್‌ ಜಾರಿ ಮಾಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇಂತಹ ವಿಷಯಗಳ ಬಗ್ಗೆ ಪ್ರಾಸಿಕ್ಯೂಷನ್ ಇಲಾಖೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ, ಆದರೆ ಸಚಿವರು, ಶಾಸಕರು ಮತ್ತು ಅವರ ಬೆಂಬಲಿಗರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಗಳು ಶಿಫಾರಸು ಮಾಡುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 321 ರ ಅಡಿಯಲ್ಲಿರುವ ಅಧಿಕಾರವನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

2014ರಿಂದ ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸಂಪುಟ ನಿರ್ಧಾರದ ಮೂಲಕ ವಿವಿಧ ಶಾಸಕರು, ಸಚಿವರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 570 ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಅನುಮತಿಸಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

ಬಡ ಜನಸಾಮಾನ್ಯರ ಸಣ್ಣ ಅಪರಾಧಗಳಿಗೂ ಕ್ರಿಮಿನಲ್‌ ವಿಚಾರಣೆ ಎದುರಿಸಬೇಕಿದೆ. ಆದರೆ, ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಅಧಿಕಾರ ಚಲಾಯಿಸುವ ಮೂಲಕ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಯಾವುದೇ ರೀತಿಯ ಶಿಕ್ಷೆಯಿಲ್ಲದೇ ಪ್ರಕರಣಗಳಿಂದ ಮುಕ್ತಗೊಳಿಸುವ ಕೆಲಸವನ್ನು ಸರ್ಕಾರ ಮಾಡಿರುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ, ಶಾಸಕರು ಮತ್ತು ಸಂಸದರ ವಿರುದ್ಧ ಬಾಕಿ ಇರುವ ಪ್ರಕರಣಗಳ ತುರ್ತು ವಿಲೇವಾರಿ ನಡೆಸಲು ಪ್ರತ್ಯೇಕ ವಿಶೇಷ ನ್ಯಾಯಾಲಯದ ಅಗತ್ಯತೆಯ ಬಗ್ಗೆ ಮಂಗಳವಾರ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠವು ಪ್ರಶ್ನಿಸಿತ್ತು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com