ಗೋಶಾಲೆಗಳಿಗೆ ನೀಡಿದ ಅನುದಾನ ವಿವರ ಬಹಿರಂಗಪಡಿಸುವಂತೆ ಸಿದ್ದರಾಮಯ್ಯ ಒತ್ತಾಯ

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ
ಗೋಶಾಲೆಗಳಿಗೆ ನೀಡಿದ ಅನುದಾನ ವಿವರ ಬಹಿರಂಗಪಡಿಸುವಂತೆ ಸಿದ್ದರಾಮಯ್ಯ ಒತ್ತಾಯ

ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕಾಯ್ದೆಯ ಹಿಂದೆ ಸರ್ಕಾರದ ದುರುದ್ಧೇಶವಿದೆಯೆಂದು ಹೇಳಿರುವ ಸಿದ್ದರಾಮಯ್ಯ, ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿದ ಅವರು, ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯವಿದೆ ಎಂದು ಸರ್ಕಾರದ ವಿರುದ್ಧ ಟೀಕೆ ನಡೆಸಿದ್ದಾರೆ.

ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ಕಿಡಿಕಾರಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಯಡಿಯೂರಪ್ಪನವರೆ ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂಬ ಪ್ರಶ್ನೆ ಮಾಡಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ ಎಂದಿದ್ದಾರೆ.

ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ ಎಂದು ಆಗ್ರಹಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com