ಶಿವಮೊಗ್ಗದ ಕಲ್ಲುಕ್ವಾರಿ ಬಳಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟದ ಹಿನ್ನಲೆಯಲ್ಲಿ, ಶುಕ್ರವಾರ ಬೆಳಗ್ಗೆ ಘಟನೆ ನಡೆದ ಸ್ಥಳಕ್ಕೆ ಗಣಿ ಭೂ ವಿಜ್ಞಾನ ಮತ್ತು ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ನಡೆಸಲು ಭೂಮಿ ಕೊಟ್ಟಿದ್ದ ಅವಿನಾಶ್ ಕುಲಕರ್ಣಿ ಮತ್ತು ಕೆಲಸದ ನಿರ್ವಹಣೆಯ ಜವಬ್ದಾರಿ ಹೊತ್ತಿದ್ದ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸ್ಪೋಟದ ತೀವೃತೆಗೆ ಬಿಹಾರ ಮೂಲದ ಎಂಟು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿ ಬಿದ್ದಿವೆ. ಹಾಗೂ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ದುರಂತದಲ್ಲಿ ಸಾವನ್ನಪ್ಪಿದ ಮೃತ ದೇಹಗಳ ಪರೀಕ್ಷೆ ನಡೆಸಲಾಗುತ್ತಿದೆ.
ಘಟನೆ ನಡೆದ ಆಜುಬಾಜಿನಲ್ಲಿ ಸಾಕಷ್ಟು ಕ್ರಶರ್ಗಳಿದ್ದು, ಅವುಗಳ ಕೆಲಸವನ್ನು ಸ್ಥಗಿತಗೊಳಿಸಿ, ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸುವ ಸಲುವಾಗಿ ಪೊಲೀಸ್ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಭೀಕರ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನಿಧಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡಿದ್ದೇನೆ. ಘಟನೆಗೆ ಕಾರಣ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ, ನಾಳೆ ಸ್ವತಃ ಘಟನೆ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ತಜ್ಞರ ತಂಡ ಆಗಮಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವು ರಾಜಕೀಯ ನಾಯಕರು ದುರಂತ ನಡೆದ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಕೂಡ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದೆ. ತನಿಖೆಯ ವರದಿ ಬಂದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.