ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳಿಗೆ ಅವರು ವಿವರ ನೀಡಿದರು.
ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು ನಡೆಯುತ್ತಿರುತ್ತವೆ. ಈ ಬಗ್ಗೆ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಿದರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ಎಲ್ಲ ಸಂಸ್ಥೆಗಳ ಜೊತೆಗೆ ರೈಲ್ವೆ , ಮಟ್ರೋ ಒಳಗೊಂಡಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಅವರು ತಿಳಿಸಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಇಡೀ ರಾಷ್ಟ್ರದ ರಸ್ತೆ ಸಾರಿಗೆ ವ್ಯವಸ್ಥೆ ಬಗ್ಗೆ ‘ಮಂಥನ’ಸಮಾವೇಶ 3 ದಿನಗಳ ಕಾಲ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆ ಹಾಗೂ ಸಂಚಾರದಟ್ಟಣೆಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರದ ಸಹಯೋಗ ಮತ್ತು ಸಹಕಾರವನ್ನು ಕೋರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬೆಂಗಳೂರಿನ ಒಳಗೆ ಮತ್ತು ಹೊರಗೆ ಹಾದುಹೋಗುತ್ತವೆ. ಸಂಚಾರ ದಟ್ಟಣೆಯ ನಿವಾರಣೆಗೆ ರಸ್ತೆ ನಿರ್ಮಾಣಗಳು ಬಲು ಮುಖ್ಯವಾಗಿದೆ. ಹಲವು ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.